ಪ್ರತಾಪ್ ಸಿಂಹ ವಿರುದ್ಧ ಬಿಜೆಪಿ ಕಾರ್ಯಕರ್ತರೇ ಬೇಸತ್ತಿದ್ದಾರೆ: ವೀಣಾಅಚ್ಚಯ್ಯ ಟೀಕೆ

ಪ್ರತಾಪ್ ಸಿಂಹ ವಿರುದ್ಧ ಬಿಜೆಪಿ ಕಾರ್ಯಕರ್ತರೇ ಬೇಸತ್ತಿದ್ದಾರೆ: ವೀಣಾಅಚ್ಚಯ್ಯ ಟೀಕೆ

LK   ¦    Apr 13, 2019 08:56:06 AM (IST)
ಪ್ರತಾಪ್ ಸಿಂಹ ವಿರುದ್ಧ ಬಿಜೆಪಿ ಕಾರ್ಯಕರ್ತರೇ ಬೇಸತ್ತಿದ್ದಾರೆ:  ವೀಣಾಅಚ್ಚಯ್ಯ ಟೀಕೆ

ಮಡಿಕೇರಿ: ಕಳೆದ ಐದು ವರ್ಷಗಳ ಕಾಲ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಪ್ರತಾಪ್‍ಸಿಂಹ ಅವರ ಕಾರ್ಯವೈಖರಿ ವಿರುದ್ಧ ಕೊಡಗಿನ ಜನರು ಮಾತ್ರವಲ್ಲ ಸ್ವತ: ಬಿಜೆಪಿ ಕಾರ್ಯಕರ್ತರೇ ಬೇಸತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ ಟೀಕಿಸಿದ್ದಾರೆ.

ನಗರ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್ ಹಾಗೂ ಜಾತ್ಯತೀತ ಜನತಾದಳದ ವತಿಯಿಂದ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ಮಡಿಕೇರಿಯಲ್ಲಿ ನಡೆದ ಪ್ರಚಾರ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೊಡಗಿನಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಕೇಂದ್ರ ಸರ್ಕಾರ ಹಾಗೂ ಪ್ರತಾಪ್ ಸಿಂಹ ವಿರುದ್ಧ ಜನ ತಿರುಗಿ ಬಿದ್ದಿದ್ದಾರೆ. ಸುಭದ್ರ ಸರ್ಕಾರದ ನಿರೀಕ್ಷೆಯಲ್ಲಿ ಜನರಿದ್ದು, ಬೆಲೆ ಏರಿಕೆಯನ್ನು ನಿಯಂತ್ರಿಸಲಾಗದ ಕೇಂದ್ರದ ವಿರುದ್ಧ ಇಡೀ ಮಹಿಳಾ ಸಮೂಹ ಅಸಮಾಧಾನಗೊಂಡಿದೆ. ಕೊಡಗನ್ನು ಕಾಡುತ್ತಿದ್ದ ಜ್ವಲಂತ ಸಮಸ್ಯೆಗಳಿಗೆ ಪ್ರತಾಪ್ ಸಿಂಹ ಅವರು ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ ಎಂದು ಆರೋಪಿಸಿದ ವೀಣಾಅಚ್ಚಯ್ಯ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಅವರ ಗೆಲುವು ನಿಶ್ಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು.

 ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್ ಮಾತನಾಡಿ ದೇಶ ರಕ್ಷಣೆ ಮಾಡುತ್ತಿರುವ ಸೈನಿಕರ ಬಲಿದಾನವನ್ನು ಕೂಡ ಬಿಜೆಪಿ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಚುನಾವಣೆ ಸಮೀಪಿಸುತ್ತಿದ್ದ ಸಂದರ್ಭ ದೇಶ ಪ್ರಧಾನಿ ರೈತರ ಖಾತೆಗೆ ವರ್ಷಕ್ಕೆ ಆರು ಸಾವಿರ ರೂಪಾಯಿಗಳನ್ನು ಹಾಕುವುದಾಗಿ ಘೋಷಿಸಿದ್ದಾರೆ. ಆ ಮೂಲಕ ಅನ್ನದಾತರನ್ನು ಮೂರ್ಖರನ್ನಾಗಿ ಮಾಡುವ ಪ್ರಯತ್ನ ಮಾಡಲಾಗಿದೆ. ದೇಶದ ಬೆನ್ನೆಲುಬಾಗಿರುವ ರೈತನ ಸಂಕಷ್ಟ ದೂರ ಮಾಡÀಲು ವಾರ್ಷಿಕ ಕೇವಲ ಆರು ಸಾವಿರ ರೂಪಾಯಿ ಸಾಕೇ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಕಡುಬಡವರ ಖಾತೆಗಳಿಗೆ ವಾರ್ಷಿಕ 72 ಸಾವಿರ ರೂಪಾಯಿಗಳನ್ನು ಹಾಕುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ನೀಡಿರುವ ಭರವಸೆ ಈಡೇರಲಿದೆ ಎಂದರು. 

 ದೇಶದ ಅಭಿವೃದ್ಧಿ ಮತ್ತು ಸೌಹಾರ್ದತೆಯ ವಾತಾವರಣದ ದೃಷ್ಟಿಯಿಂದ ಕಾಂಗ್ರೆಸ್ ಮೈತ್ರಿಕೂಟದೊಂದಿಗೆ ಚುನಾವಣೆಯನ್ನು ಎದುರಿಸುತ್ತಿದ್ದು, ದೇಶವನ್ನು ವಿಭಜಿಸುವ ಕಾರ್ಯವನ್ನು ನಮ್ಮ ಪಕ್ಷ ಮಾಡುವುದಿಲ್ಲವೆಂದು ಟಿ.ಪಿ.ರಮೇಶ್ ಹೇಳಿದರು.

 ಜಾಥಾದ ನೇತೃತ್ವ ವಹಿಸಿದ್ದ ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾóಕ್ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುವ ಮೂಲಕ ಮೈತ್ರಿ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಸಿ.ಹೆಚ್.ವಿಜಯಶಂಕರ್ ಅವರು ಅತ್ಯಧಿಕ ಮತಗಳ ಅಂತರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಲಿದ್ದಾರೆ ಎಂದರು.

 ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಹೊರೆಯಾಗುವ ಯೋಜನೆಗಳನ್ನು ಜಾರಿ ಮಾಡಿ ಸಂಕಷ್ಟಕ್ಕೆ ಸಿಲುಕಿಸಿದ ಪರಿಣಾಮವಾಗಿ ಬಿಜೆಪಿ ಅಭ್ಯರ್ಥಿ ಹೀನಾಯ ಸೋಲು ಅನುಭವಿಸಲಿದ್ದಾರೆ ಎಂದು ಅವರು ಭವಿಷ್ಯ ನುಡಿದರು.

 ಕೆಪಿಸಿಸಿ ಹಿರಿಯ ಉಪಾಧ್ಯಕ್ಷ ಮಿಟ್ಟುಚಂಗಪ್ಪ, ಐಎನ್‍ಟಿಯುಸಿ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ರಾಜ್ಯ ಅಲ್ಪಸಂಖ್ಯಾತರ ಘಟಕದ ಸಂಯೋಜಕ ಎಂ.ಎ.ಉಸ್ಮಾನ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ವಕ್ಫ್ ಅಧ್ಯಕ್ಷ ಕೆ.ಎ.ಯಾಕುಬ್, ನಗರಸಭಾ ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಮಾಜಿ ಸದಸ್ಯರುಗಳಾದ ಚುಮ್ಮಿದೇವಯ್ಯ, ತಜಸುಂ, ಉದಯಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರುರವೀಂದ್ರ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಇ.ಮ್ಯಾಥ್ಯು, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಪ್ರಮುಖರಾದ ಪವನ್ ಪೆಮ್ಮಯ್ಯ, ಮುದ್ದಪ್ಪ, ಮುನೀರ್, ಪ್ರಭುರೈ ಮತ್ತಿತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.