ಸಂತ್ರಸ್ತ ಕುಟುಂಬಗಳ ನೆರವಿಗೆ ಶೀಘ್ರ ಕ್ರಮಕ್ಕೆ ಜಿಲ್ಲಾಧಿಕಾರಿ ಶ್ರೀವಿದ್ಯಾ ಸೂಚನೆ

ಸಂತ್ರಸ್ತ ಕುಟುಂಬಗಳ ನೆರವಿಗೆ ಶೀಘ್ರ ಕ್ರಮಕ್ಕೆ ಜಿಲ್ಲಾಧಿಕಾರಿ ಶ್ರೀವಿದ್ಯಾ ಸೂಚನೆ

CI   ¦    Oct 11, 2018 07:53:01 PM (IST)
ಸಂತ್ರಸ್ತ ಕುಟುಂಬಗಳ ನೆರವಿಗೆ ಶೀಘ್ರ ಕ್ರಮಕ್ಕೆ ಜಿಲ್ಲಾಧಿಕಾರಿ ಶ್ರೀವಿದ್ಯಾ ಸೂಚನೆ

ಮಡಿಕೇರಿ: ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ತುತ್ತಾಗಿರುವ ನಗರ ಪ್ರದೇಶದ ಸಂತ್ರಸ್ತ ಕುಟುಂಬದವರಿಗೆ ಪರಿಹಾರ ವಿತರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದ್ದಾರೆ.

ನಗರದ ನಗರಸಭೆ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಅವರು, ನಿವೇಶನ ರಹಿತರು ಮತ್ತು ಮನೆ ಕಳೆದುಕೊಂಡವರ ಪಟ್ಟಿ ಮಾಡಿ ವರದಿ ನೀಡುವಂತೆ ಸೂಚನೆ ನೀಡಿದರು. ಈ ಬಗ್ಗೆ ಮಾಹಿತಿ ನೀಡಿದ ಪೌರಾಯುಕ್ತರಾದ ಎಂ.ಎಲ್.ರಮೇಶ್ ಅವರು, ಪ್ರಕೃತಿ ವಿಕೋಪದಿಂದಾಗಿ ಸುಮಾರು 175 ಕುಟುಂಬಗಳು ಮನೆ ಕಳೆದುಕೊಂಡಿದ್ದಾರೆ. ಇವರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕಿದೆ ಎಂದು ಅವರು ಮಾಹಿತಿ ನೀಡಿದರು.

ಪ್ರಕೃತಿ ವಿಕೋಪದಿಂದಾಗಿ ಭೂಕುಸಿತ ಉಂಟಾಗಿ ಮನೆ ಹಾನಿ, ರಸ್ತೆ ಹಾನಿ ಹೀಗೆ ಹಲವು ರೀತಿಯ ಸಮಸ್ಯೆಗಳು ಉಂಟಾಗಿದ್ದು, ಈ ಸಂಬಂಧ ಭೂಕುಸಿತವಾಗಿರುವ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ನಗರೋತ್ಥಾನ ಮೂರನೇ ಹಂತದಲ್ಲಿ ಆರಂಭವಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈಗಾಗಲೇ ನಗರ ಒಳಚರಂಡಿ ಮಂಡಳಿ ವತಿಯಿಂದ ನಿರ್ಮಾಣ ಮಾಡಿರುವ ಸ್ಥಳದಲ್ಲಿ ರಸ್ತೆಗಳು ತುಂಬಾ ಹದಗೆಟ್ಟಿದ್ದು, ಕೂಡಲೇ ಸರಿಪಡಿಸುವಂತೆ ಒಳಚರಂಡಿ ಮಂಡಳಿ ಎಂಜಿನಿಯರ್ ಮತ್ತು ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು. ಈಗಾಗಲೇ ನಗರಸಭೆಗೆ ಬಿಡುಗಡೆಯಾಗಿರುವ 2018-19ನೇ ಸಾಲಿನ ಯೋಜನೆಯ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ನಗರಾಭಿವೃದ್ಧಿ ಶಾಖೆಯ ಯೋಜನಾ ನಿರ್ದೇಶಕರಾದ ಗೋಪಾಲಕೃಷ್ಣ, ನಗರಸಭೆಯ ವ್ಯವಸ್ಥಾಪಕರಾದ ಸುಜಾತ, ತಾಹಿರ್, ರಮೇಶ್, ಸಿಬ್ಬಂದಿಗಳು ಹಾಜರಿದ್ದರು.