ಮಹಾರಾಷ್ಟ್ರ ಸರ್ಕಾರ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಮಹಾರಾಷ್ಟ್ರ ಸರ್ಕಾರ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

LK   ¦    Jul 11, 2019 04:55:39 PM (IST)
ಮಹಾರಾಷ್ಟ್ರ ಸರ್ಕಾರ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಮಂಡ್ಯ: ಅಧಿಕಾರ ಮತ್ತು ಆಡಳಿತ ಯಂತ್ರ ದುರುಪಯೋಗ ಪಡಿಸಿಕೊಂಡು ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ, ಯುವ ಕಾಂಗ್ರೆಸ್ ಸಮಿತಿ, ಮಂಡ್ಯ ಜಿಲ್ಲಾ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಕಾರ್ಯಕರ್ತರು ನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟಿಸಿದರು.

 ಮೈಸೂರು- ಬೆಂಗಳೂರು ಹೆದ್ದಾರಿ ಯಲ್ಲಿ ಕೆಲಕಾಲ ಧರಣಿ ನಡೆಸಿ, ಮಾನವ ಸರಪಳಿ ರಚಿಸಿ ಹೆದ್ದಾರಿ ಸಂಚಾರಕ್ಕೆ ಅಡ್ಡಿಪಡಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ  ಪ್ರಧಾನಿ ನರೇಂದ್ರ ಮೋದಿ ಅವರು ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

 ನಂತರ ಮಾತನಾಡಿದ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಅತೃಪ್ತ ಶಾಸಕರನ್ನು ಮನವೊಲಿಸಿ ರಾಜ್ಯಕ್ಕೆ ವಾಪಸ್ ಕರೆ ತರಲು ಹೋಗಿದ್ದ ನಮ್ಮ ನಾಯಕರಾದ ಡಿ.ಕೆ.ಶಿವಕುಮಾರ್ ಅವರನ್ನು ಮುಂಬೈ ಪೊಲೀಸರು ರಿಸೈನೆನ್ಸ್ ಹೋಟೆಲ್‍ಗೆ ಬಿಡದೆ ತಡೆ ಹಿಡಿಯುವ ಮೂಲಕ ಮಹಾರಾಷ್ಟ್ರದ ಬಿಜೆಪಿ ಸರ್ಕಾರ ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಕಿಡಿಕಾರಿದರು.

 ನಮ್ಮ ಪಕ್ಷದ ಶಾಸಕರನ್ನು ಬಿಜೆಪಿ ನಾಯಕರು ಹೈಜಾಕ್ ಮಾಡಿದ್ದು, ಹಣ, ಅಧಿಕಾರದ ಆಮಿಷವೊಡ್ಡಿ ಮೈತ್ರಿ ಸರ್ಕಾರವನ್ನು ದುರ್ಬಲಗೊಳಿಸುವ ಮೂಲಕ ಬಿಜೆಪಿ ಅಧಿಕಾರ ಹಿಡಿಯಲು ವಾಮ ಮಾರ್ಗ ಅನುಸರಿಸಿದೆ. ಇದು ಸರಿಯಾದ ಕ್ರಮವಲ್ಲ. ಕೂಡಲೇ ನಮ್ಮ ಶಾಸಕರನ್ನು ಬಿಡುವ ಮೂಲಕ ರಾಜ್ಯದಲ್ಲಿ ಸುಸೂತ್ರ ಸರ್ಕಾರ ನಡೆಯಲು ಬಿಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. 

ರಾಜ್ಯ ಮೈತ್ರಿ ಸರ್ಕಾರದ ಶಾಸಕರನ್ನು ರಾಜೀನಾಮೆ ಕೊಡಿಸಿ, ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವ ಬಿಜೆಪಿ ಕ್ರಮ ಖಂಡನೀಯ. ಬಿಜೆಪಿ ಮುಖಂಡರು ಸಂವಿಧಾನ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ದೂರಿದರು. ಅತೃಪ್ತ ಶಾಸಕರು ರಾಜೀನಾಮೆ ಯನ್ನು ಹಿಂಪಡೆದು ಸರ್ಕಾರವನ್ನು ಬೆಂಬಲಿಸುವ ನಿರ್ಧಾರ ಕೈಗೊಳ್ಳಬೇಕು. ಮೈತ್ರಿ ಸರ್ಕಾರವನ್ನು ಅಭದ್ರಗೊಳಿಸುವ ಬಿಜೆಪಿ ಹುನ್ನಾರಕ್ಕೆ ಬಲಿಯಾಗಬಾರದು ಎಂದು ಒತ್ತಾಯಿಸಿದರು.